ಲೋಕಬಂಧು ನ್ಯೂಸ್ | ಕಾಪು, ಸೆ.18
ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನ ಕೇಂದ್ರದ ಕಟ್ಟಡ ಹಾಗೂ ಕ್ಯಾಂಪಸ್‌ನ್ನು ಸೂಕ್ತ ಹಾಗೂ ಸದ್ಬಳಕೆಯ ಉದ್ದೇಶಕ್ಕೆ ಬಳಸಿಕೊಳ್ಳುವ ಕುರಿತು ಸರ್ಕಾರದ ಹಂತದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದರು.
ಸುಮಾರು 53.85 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬೃಹತ್ ಕಟ್ಟಡ ಹಲವು ವರ್ಷಗಳಿಂದ ಬಳಕೆಯಾಗದೆ ಉಳಿದಿದೆ. ಅದನ್ನು ಹಾಳಾಗಲು ಬಿಡದೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದರು.
2014-15ನೇ ಸಾಲಿನ ಬಜೆಟ್‌ನಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಘೋಷಿಸಲಾಗಿತ್ತು. ರೂಸಾ ಯೋಜನೆಯಡಿ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು. ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಯೋಜನೆ ಪೂರ್ಣಗೊಳ್ಳದೆ ಉಳಿದಿದೆ.
ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸುವ ಚಿಂತನೆಯಿದ್ದು, ಬೆಳಪು ಕ್ಯಾಂಪಸ್ ಅದಕ್ಕೆ ಸೂಕ್ತವಾಗಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಈ ಎಲ್ಲಾ ವಿಚಾರಗಳ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕರಾವಳಿ ಅಭಿವೃದ್ಧಿಗೆ ಆದ್ಯತೆ
ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಸರ್ಕಾರ ಆದ್ಯತೆ ನೀಡಲಿದೆ. ಉಡುಪಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ಚಟುವಟಿಕೆಗಳಂಥ ಕಾರ್ಯಕ್ರಮಗಳನ್ನು ಉತ್ತೇಜಿಸುವ ಮೂಲಕ ಪ್ರವಾಸೋದ್ಯಮ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ಅದರಿಂದ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳು ಹೆಚ್ಚಲಿವೆ. ಕರಾವಳಿ ಭಾಗಕ್ಕೆ ಸಾಫ್ಟ್ ಇಂಡಸ್ಟ್ರಿಗಳನ್ನು ತರುವ ಪ್ರಯತ್ನವೂ ನಡೆಯಲಿದೆ ಎಂದರು.
ಉಡುಪಿ ಸ್ಟೇಡಿಯಂ, ಮಂಗಳೂರಿನ ಮಂಗಳ ಸ್ಟೇಡಿಯಂ ಸೇರಿದಂತೆ ಕರಾವಳಿಯ ಕ್ರೀಡಾಂಗಣಗಳ ಅಭಿವೃದ್ಧಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸೆ.21ರಿಂದ 23ರ ವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗುವುದು. ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಂಗಳೂರು ವಿ.ವಿ. ರಿಜಿಸ್ಟ್ರಾರ್ ಸಂತೋಷ್ ಬಿ. ಜಗಲಾಸರ್, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ, ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಗುತ್ತಿಗೆದಾರ ವಾಸುದೇವ್ ಶೆಟ್ಟಿ ಕಾಪು ಮೊದಲಾದರಿದ್ದರು.
.jpg)
.jpg)