ಲೋಕಬಂಧು ನ್ಯೂಸ್ ಉಡುಪಿ, ಸೆ.15
ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿರುವುದು ದಿಟ್ಟ ಹಾಗೂ ಮಹತ್ವದ ಹೆಜ್ಜೆಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಮೀನುಗಾರಿಕೆ, ಬಂದರು, ಕೃಷಿ, ಪ್ರವಾಸೋದ್ಯಮ, ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಅಪಾರ ಸಾಮರ್ಥ್ಯ ಹೊಂದಿವೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲೇ ಸಂಪುಟ ಸಭೆ ನಡೆಸುತ್ತಿರುವುದು ಸ್ಥಳೀಯ ಸಮಸ್ಯೆಗಳಿಗೆ ಸರ್ಕಾರದ ಗಮನ ಸೆಳೆಯಲು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲು ಸಹಕಾರಿಯಾಗಲಿದೆ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೀನುಗಾರರ ದೋಣಿ, ಬಂದರು, ಜೆಟ್ಟಿ, ಮೀನು ಸಂಸ್ಕರಣಾ ಘಟಕ, ಶೀತಲೀಕರಣ ಹಾಗೂ ಮಾರುಕಟ್ಟೆ ಸೌಲಭ್ಯಗಳ ಅಭಿವೃದ್ಧಿ, ವಿಮೆ ಮತ್ತು ಡೀಸೆಲ್ ಸಬ್ಸಿಡಿ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಕರಾವಳಿಯ ಯುವಜನತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸುವುದು, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪರಿಸರಕ್ಕೆ ಹಾನಿಯಾಗದ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ.
ಭತ್ತ, ತೆಂಗು, ಅಡಿಕೆ, ಕಾಳುಮೆಣಸು, ಗೋಡಂಬಿ ಮೊದಲಾದ ಬೆಳೆಗಳ ರೈತರ ಸಮಸ್ಯೆಗಳು, ಮಳೆ ಕೊರತೆ, ನೆರೆ, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಸೇರಿದಂತೆ ಕರಾವಳಿಯ ಪ್ರಮುಖ ಸಮಸ್ಯೆಗಳಿಗೂ ಸಭೆಯಲ್ಲಿ ಸೂಕ್ತ ಪರಿಹಾರ ದೊರೆಯುವ ಸಾಧ್ಯತೆ ಇದೆ ಎಂದು ರಮೇಶ್ ಕಾಂಚನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.