ಲೋಕಬಂಧು ನ್ಯೂಸ್ | ಪಡುಬಿದ್ರಿ, ಸೆ.22
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಿರ್ಮಿಸಲಾಗಿರುವ ಮೊಗವೀರ ಕುಲಗುರು ಕೀರ್ತಿ ಶೇಷ ಶ್ರೀ ಮಾಧವಮಂಗಲ ಪೂಜಾರ್ಯರ ಭವ್ಯ ಕಂಚಿನ ಪುತ್ಥಳಿ ಅನಾವರಣ ಮತ್ತು ನೂತನ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣೆ ಸೆಪ್ಟೆಂಬರ್ 25ರಂದು ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗುರಿಕಾರರಿಗೆ ಗೌರವಧನವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಹಸ್ತಾಂತರಿಸಲಿದ್ದಾರೆ. ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಅಧ್ಯಕ್ಷತೆ ವಹಿಸುವರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮತ್ತು ಯಶಪಾಲ್ ಎ. ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವಿನಯ ಕುಮಾರ್ ಸೊರಕೆ ಮೊದಲಾದವರು ಅತಿಥಿಗಳಾಗಿದ್ದಾರೆ.
ಉದ್ಯಮಿ ಆನಂದ್ ಸಿ. ಕುಂದರ್, ಮೊಗವೀರ ಮಹಾಜನ ಸಂಘದ ಮುಂಬೈ ಸಮಿತಿ ಗೌರವಾಧ್ಯಕ್ಷ ವೇದಪ್ರಕಾಶ್ ಶ್ರೀಯಾನ್, ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಮುಂಬೈ ಅಧ್ಯಕ್ಷ ಸಂತೋಷ್ ಪುತ್ರನ್ ಸೇರಿದಂತೆ ಗಣ್ಯರು ಉಪಸ್ಥಿತರಿರುವರು ಎಂದು ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
