ಲೋಕಬಂಧು ನ್ಯೂಸ್ ಉಡುಪಿ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಹಯೋಗದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29ರಂದು ಬೆಳಿಗ್ಗೆ 7.30ರಿಂದ ಅಪರಾಹ್ನ 2.30ರ ವರೆಗೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಐವನ್ ಡಿ'ಸೋಜಾ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಪೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು.
ಅರ್ಥಿಕವಾಗಿ ಅಶಕ್ತರಾದ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಳೆದ ಸತತ ನಾಲ್ಕು ವರ್ಷಗಳಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು ಒಟ್ಟು 800 ಯುನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ. ಈ ಬಾರಿ ಸುಮಾರು 300 ಯುನಿಟ್ ರಕ್ತ ಸಂಗ್ರಹದ ಗುರಿ ಹೊಂದಲಾಗಿದ್ದು ರಕ್ತದಾನಿಗಳು ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಆರ್ಥಿಕ ಅಶಕ್ತ ರೋಗಿಗಳಿಗೆ ನೆರವಾಗುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿದ್ದಾರೆ.