ಜನಪರ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ

ಲೋಕಬಂಧು ನ್ಯೂಸ್ | ಪಡುಬಿದ್ರಿ
ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಉಚ್ಚಿಲ ಭೇಟಿ ಸಂದರ್ಭದಲ್ಲಿ ಭೇಟಿ ಮಾಡಿ ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ವಿಶೇಷ ಚೇತನ ಮಕ್ಕಳ ಶಿಕ್ಷಕರು, ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿ ಹಾಗೂ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಅವರ ಸೇವೆಗೆ ತಕ್ಕಂತೆ ಸಮರ್ಪಕ ಸೌಲಭ್ಯ ಕಲ್ಪಿಸಿ, ಆರ್ಥಿಕ ಸ್ಥಿರತೆ ಮತ್ತು ಉದ್ಯೋಗ ಭದ್ರತೆ ಖಚಿತಪಡಿಸಬೇಕು ಎಂದು ಮನವಿ ಮಾಡಿದರು.


ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಕಾಲುಸಂಕ, ತಡೆಗೋಡೆ ಹಾಗೂ ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ತುರ್ತಾಗಿ ಬಿಡುಗಡೆ ಮಾಡಬೇಕು.


ನಾಡದೋಣಿ ಮೀನುಗಾರರು ಸೀಮೆಎಣ್ಣೆ ಬೆಲೆ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಾಡದೋಣಿಗಳಿಗೆ ನೀಡುವ ಸೀಮೆಎಣ್ಣೆ ಸಬ್ಸಿಡಿ ಹೆಚ್ಚಿಸಿ, ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯಕ್ಕೆ ನೆರವಾಗಬೇಕು ಎಂದು ಆಗ್ರಹಿಸಿದರು.


ಮಲ್ಪೆ ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಗಾಗಿ ನೂತನ ಜೆಟ್ಟಿ, ಔಟರ್ ಹಾರ್ಬರ್ ನಿರ್ಮಾಣ, ಸಮರ್ಪಕ ಪಾರ್ಕಿಂಗ್ ಹಾಗೂ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಕೋರಿದರು.


ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಕಟ್ಟಡ ನಿರ್ಮಾಣ ಸಾಮಗ್ರಿ ಲಭ್ಯತೆ ಹಿನ್ನೆಲೆಯಲ್ಲಿ ಕ್ವಾರಿ, ಸ್ಟೋನ್ ಕ್ರಷರ್ ಹಾಗೂ ಎಂ-ಸ್ಯಾಂಡ್ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ನಿರ್ಮಾಣ ಸಾಮಗ್ರಿಗಳ ಪೂರೈಕೆಯಲ್ಲಿನ ಅಡಚಣೆ ನಿವಾರಿಸಿ, ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕಾನೂನುಬದ್ಧ ಹಾಗೂ ಕಾರ್ಯಸಾಧ್ಯ ಪರಿಹಾರಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗೆ ಯಶಪಾಲ್ ಮನವಿ ಮಾಡಿದರು.