ಲೋಕಬಂಧು ನ್ಯೂಸ್ | ಮಣಿಪಾಲ
ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆದು, ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡದಂತೆ ಕ್ರಮ ಕೈಗೊಳ್ಳಬೇಕು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಗುರುವಾರ ಮನವಿ ಸಲ್ಲಿಸಿತು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ಹೆಸರು ತೆಗೆದುಹಾಕಲು ಬಳಸುವ ಫಾರಂ-7 ಅರ್ಜಿಗಳ ದುರುಪಯೋಗವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಕ್ರೈಸ್ತರು ಮತ್ತು ಮುಸ್ಲಿಮರನ್ನು ಗುರಿಯಾಗಿಸಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಸಂಶಯವೂ ಇದೆ. ತಪ್ಪು ಮಾಹಿತಿ ಅಥವಾ ಸುಳ್ಳು ಆಕ್ಷೇಪಣೆ ಆಧರಿಸಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ವಿಭಾಗ ಎಚ್ಚರಿಕೆ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಸ್ವೀಕರಿಸಿದ, ಅಂಗೀಕರಿಸಿದ ಹಾಗೂ ತಿರಸ್ಕರಿಸಿದ ಫಾರಂ-7 ಅರ್ಜಿಗಳ ವಿವರ ಬಹಿರಂಗಪಡಿಸಬೇಕು. ಹೆಸರು ತೆಗೆದುಹಾಕುವ ಮೊದಲು ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಹಾಗೂ ವಿಚಾರಣೆಯಲ್ಲಿ ತಮ್ಮ ವಾದ ಮಂಡಿಸಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನೂ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಲಾಗಿದೆ.
ಅಲ್ಪಸಂಖ್ಯಾತರು, ದಲಿತರು ಮತ್ತು ದುರ್ಬಲ ವರ್ಗಗಳ ಅರ್ಹ ಮತದಾರರ ಹಕ್ಕು ರಕ್ಷಿಸಿ, ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತತೆ ಕಾಯ್ದುಕೊಳ್ಳಬೇಕು. ಗೊಂದಲಗಳಿಗೆ ತೆರೆ ಎಳೆಯಲು ಎಸ್ಐಆರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದೂ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಮೆಲ್ವಿನ್ ಅರಾನ್ಹಾ ಶಿರ್ವ, ಕಾರ್ಯದರ್ಶಿ ಜೂಲಿಯೆಟ್ ಡಿ'ಸೋಜಾ, ಕೋಶಾಧಿಕಾರಿ ಉರ್ಬನ್ ಲೂವಿಸ್, ನಿಯೋಜಿತ ಅಧ್ಯಕ್ಷ ಲೂವಿಸ್ ಡಿ'ಸೋಜಾ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್, ಮಾಜಿ ಅಧ್ಯಕ್ಷ ಅಲ್ಫೋನ್ಸ್ ಡಿ'ಕೋಸ್ತಾ, ವಲೇರಿಯನ್ ಫೆರ್ನಾಂಡಿಸ್, ಮೇರಿ ಡಿ'ಸೋಜಾ, ಸಮುದಾಯದ ಮುಖಂಡರಾದ ವೆರೋನಿಕಾ ಕರ್ನೇಲಿಯೊ, ರೋಶನಿ ಒಲಿವರ್ ಮೊದಲಾದವರಿದ್ದರು.
