ಲೋಕಬಂಧು ನ್ಯೂಸ್ ಉಡುಪಿ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ‘ಸಹಬಾಳ್ವೆ’ ಸಂಘಟನೆ ಹಾಗೂ ಸಮಾನಮನಸ್ಕ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ‘ಊರೂರು ಜಂತರ್ ಮಂತರ್’ ಹೆಸರಿನಲ್ಲಿ ಪ್ರತಿಭಟನೆ ನಡೆಯಿತು.ನಗರದ ಕ್ಲಾಕ್ ಟವರ್ ಬಳಿಯಿಂದ ಕಾಲ್ನಡಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಜೋಡುಕಟ್ಟೆ ಬಳಿ ಪ್ರತಿಭಟನಾ ಸಭೆ ನಡೆಸಿದರು.
ಈ ವೇಳೆ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ವಕ್ತಾರೆ ಭವ್ಯ ನರಸಿಂಹಮೂರ್ತಿ, 2014ರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಾ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದರು. ರೈತರ ಆದಾಯ ದುಪ್ಪಟ್ಟುಗೊಳಿಸುವ ಹಾಗೂ ಯುವಕ- ಯುವತಿಯರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ. ಚುನಾವಣೆಯಲ್ಲಿ ಸೋಲುವ ಭೀತಿ ಎದುರಾದಾಗ ಚುನಾವಣಾ ಆಯೋಗವನ್ನು ತಮ್ಮ ಪರವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.
ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕಾರ್ಯವೈಖರಿಯನ್ನೂ ಪ್ರಶ್ನಿಸಿದ ಅವರು, ದಲಿತರು ಹಾಗೂ ಹಿಂದುಳಿದ ವರ್ಗಗಳ ವಿರುದ್ಧ ಈ ಹಿಂದೆ ನಡೆದ ದಬ್ಬಾಳಿಕೆಗಳಿಗೆ ಈಗಿನ ಯುವಪೀಳಿಗೆ ಪ್ರಜಾಸತ್ತಾತ್ಮಕವಾಗಿ ಪ್ರತಿಕ್ರಿಯಿಸುತ್ತಿದೆ ಎಂದರು.ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ 13 ಕೋಟಿ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಸಂಸತ್ತಿಗೆ ಹಾಜರಾಗದೆ ದೂರ ಉಳಿದಿದ್ದಾರೆ ಎಂದು ಟೀಕಿಸಿದ ಅವರು, ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆಯಿಂದ ಲಕ್ಷಾಂತರ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕವಿದೆ ಎಂದರು. ಕೂಡಲೇ ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಹರಿಪ್ರಸಾದ್ ರೈ, ಇಸ್ಮಾಯಿಲ್ ಕೊಡಿಬೆಂಗ್ರೆ, ಪ್ರಶಾಂತ್ ಜತ್ತನ್ ಸೇರಿದಂತೆ ವಿವಿಧ ಸಂಘಟನೆಗಳ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.