ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ವೃದ್ಧಿಗೆ 30 ಕೋ. ಅನುದಾನಕ್ಕೆ ಮನವಿ

ಲೋಕಬಂಧು ನ್ಯೂಸ್ ಉಡುಪಿ
ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರ ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ಹೆಚ್ಚಾಗಿದೆ.


ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್'ಗಳಲ್ಲಿ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ, ರಸ್ತೆ ನಿರ್ವಹಣೆ, ಚರಂಡಿ ಹಾಗೂ ಮಳೆನೀರು ಹರಿಯುವ ವ್ಯವಸ್ಥೆ, ಕಾಲುಸಂಕ, ತಡೆಗೋಡೆ, ದಾರಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ವಿಶೇಷವಾಗಿ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆ ಬಲಪಡಿಸುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತಡೆಗೋಡೆ ಮತ್ತು ಕಾಲುಸಂಕಗಳನ್ನು ನಿರ್ಮಿಸುವುದು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಅತ್ಯಾವಶ್ಯಕವಾಗಿದೆ.


ಉಡುಪಿ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು ಜನಸಂಖ್ಯೆ ಮತ್ತು ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಮಿತ ಅನುದಾನದಲ್ಲಿ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಕರವಾಗಿದೆ. ಸಾರ್ವಜನಿಕರಿಂದಲೂ ವಿವಿಧ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಿರಂತರವಾಗಿ ಬೇಡಿಕೆಗಳು ಬರುತ್ತಿರುವುದರಿಂದ ನಗರದ ಅಗತ್ಯತೆಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಹರಿಸಲು ಕನಿಷ್ಟ 30 ಕೋ. ರೂ.ಗಳ ವಿಶೇಷ ಅನುದಾನದ ಅಗತ್ಯವಿದೆ ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.