ಉಡುಪಿ ಜಿಲ್ಲಾಸ್ಪತ್ರೆ ಸಂಬಂಧ ನ‌.3ರಂದು ಸಭೆ

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ನವೆಂಬರ್ 3ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಆ ಸಂಬಂಧ ಈಗಾಗಲೇ ಆರೋಗ್ಯ ಸಚಿವರ ಸಮಯ ಕೋರಿದ್ದು ಸಭೆಯಲ್ಲಿ ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವರಿಗೆ ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬದ ಬಗ್ಗೆ ಅರಿವಿದೆ. ಸಭೆಯಲ್ಲಿ ಆ ಕುರಿತು ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪ್ರಶಸ್ತಿ ಆಯ್ಕೆಗೆ ಮಾನದಂಡ
ಉಡುಪಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸನ್ಮಾನ ರದ್ದುಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಒಂದೆರಡು ಜಿಲ್ಲೆಗಳಲ್ಲಿ ಇಂಥ ಕಾರ್ಯಕ್ರಮ ಜಾರಿಯಲ್ಲಿದೆ. ಈ ವಿಚಾರದಲ್ಲಿ ಇಡೀ ರಾಜ್ಯಕ್ಕೆ ಅನ್ವಯವಾಗುವ ಏಕರೂಪದ ನೀತಿ ರೂಪಿಸಬೇಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಗ್ಗೆ ಚರ್ಚೆ ನಡೆಸುತ್ತಿದೆ. ರಾಜ್ಯಾದ್ಯಂತ ಪ್ರಶಸ್ತಿ ನೀಡುವ ವ್ಯವಸ್ಥೆ ಹೇಗಿರಬೇಕು ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಈ ವರ್ಷವೇ ಪ್ರಶಸ್ತಿ ಆಯ್ಕೆಗೆ ಮಾನದಂಡ ರೂಪಿಸಿ, ಸಮಿತಿ ರಚಿಸುವ ಯೋಜನೆಯೂ ಇದೆ.


ರಾಜಕೀಯ ಅಥವಾ ಯಾವುದೇ ರೀತಿಯ ಒತ್ತಡಕ್ಕೆ ಮಣಿದು ಪ್ರಶಸ್ತಿ ಆಯ್ಕೆ ನಡೆಯಬಾರದು. ಪ್ರಶಸ್ತಿಗೆ ತನ್ನದೇ ಆದ ಗೌರವ ಮತ್ತು ಘನತೆ ಇದೆ. ಆ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ರೈತರ ಹಿತಕ್ಕಾಗಿ ಹಾಲು ದರ ಏರಿಕೆ
ಹಾಲಿನ ದರ ಏರಿಕೆ ಕುರಿತು ಮಾತನಾಡಿದ ಸಚಿವ ಅರ್ಷದ್, ರೈತರ ಬೇಡಿಕೆ ಹಾಗೂ ಅವರ ಬದುಕಿನ ಬಗ್ಗೆ ಗಮನಹರಿಸುವುದು ಸರ್ಕಾರದ ಜವಾಬ್ದಾರಿ. ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಮಾಡದಿದ್ದರೆ ರೈತರು ಹಾಲನ್ನು ಹೊರ ರಾಜ್ಯಗಳಿಗೆ ರಫ್ತು ಮಾಡಲು ಮುಂದಾಗುವ ಪರಿಸ್ಥಿತಿ ಇತ್ತು. ಅದರಿಂದ ರಾಜ್ಯದಲ್ಲಿ ಹಾಲಿನ ಕೊರತೆ ಉಂಟಾಗುವ ಸಾಧ್ಯತೆ ಜೊತೆಗೆ ರೈತರಿಗೆ ಉತ್ತಮ ಬೆಲೆ ದೊರೆಯದಿರುವ ವಿಚಾರವನ್ನೂ ಪರಿಗಣಿಸಿ ದರ ಏರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.


ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲಿಯೂ ಈ ರೀತಿಯ ಹೇಳಿಕೆ ನೀಡಿಲ್ಲ ಎಂದರು.


ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ ಕುರಿತು ಮಾತನಾಡಿದ ಸಚಿವರು, ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯದಿದ್ದರೆ ಕಷ್ಟ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ವ್ಯವಸ್ಥೆ ಉಳಿಯುವುದು ಮುಖ್ಯ.


ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆಡಳಿತ ಪಕ್ಷದ ಸಹಭಾಗಿಯಂತೆ ಅಥವಾ ಮೈತ್ರಿಕೂಟದ ಪಾಲುದಾರನಂತೆ ವರ್ತಿಸುವ ಪರಿಸ್ಥಿತಿ ಉಂಟಾದರೆ ಅದರ ವಿರುದ್ಧ ಧ್ವನಿ ಎತ್ತುವುದು ಎಲ್ಲರ ಕರ್ತವ್ಯ. ಇಂಡಿಯಾ ಮೈತ್ರಿಕೂಟ ಹಾಗೂ ಯುವಕರು ದೆಹಲಿಯಲ್ಲಿ ಬೃಹತ್ ಸಭೆ ನಡೆಸುತ್ತಿದ್ದಾರೆ ಎಂದರು.


ಚುನಾವಣಾ ಆಯೋಗ ಜಾರಿಗೆ ತಂದಿರುವ ಎಸ್ಐಆರ್ ಪ್ರಕ್ರಿಯೆಯ ಉದ್ದೇಶವೇ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದಾಗಿದೆ ಎಂಬುದು ನಮ್ಮ ಆರೋಪ. ಈ ವಿಚಾರದ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಸಚಿವ ಅರ್ಷದ್ ಸ್ಪಷ್ಟಪಡಿಸಿದರು.


ರಾಜ್ಯದ ನಟರು ಕೋಮುವಾದಿಗಳಲ್ಲ
ನೆಚ್ಚಿನ ನಟರು ಕೋಮುವಾದಿಗಳಾಗಿದ್ದಾರೆ ಎಂಬ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಸಚಿವ ರಿಜ್ವಾನ್ ಅರ್ಷದ್, ತಾನು ಬಾಲಿವುಡ್ ನಟರ ಬಗ್ಗೆ ಮಾತನಾಡಿದ್ದೇನೆಯೇ
ಹೊರತು ಕರ್ನಾಟಕದ ನಟರ ಬಗ್ಗೆ ಅಲ್ಲ. ನಮ್ಮ ರಾಜ್ಯದ ನಟರು ಕೋಮುವಾದಿಗಳಲ್ಲ. ಬಾಲಿವುಡ್‌ನ ಹಲವು ನಟರು ಕೋಮುವಾದಿ ಧೋರಣೆಯಲ್ಲಿ ವರ್ತಿಸುಸುವುದಲ್ಲದೆ, ಅಂಥ ವಿಚಾರಗಳನ್ನು ಬಿಂಬಿಸುವ ಸಿನಿಮಾಗಳನ್ನೂ ಮಾಡಿದ್ದಾರೆ. ಆ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು