ಲೋಕಬಂಧು ನ್ಯೂಸ್ ಉಡುಪಿ
ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಈಚೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಪ್ರದೀಪ್ ಪೂಜಾರಿಗೆ ನ್ಯಾಯ ಒದಗಿಸುವಂತೆ ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ.ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ನೇತೃತ್ವದಲ್ಲಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಸೋಮವಾರ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬಿಲ್ಲವ ಸಮುದಾಯದ ಮುಖಂಡರು ಹಾಗೂ ಮೃತ ಪ್ರದೀಪ್ ಪೂಜಾರಿ ಕುಟುಂಬಸ್ಥರು ಭಾಗವಹಿಸಿ ಪ್ರಕರಣದ ಕುರಿತು ಚರ್ಚಿಸಿದರು.
ಸಭೆಯ ಬಳಿಕ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತನಿಖೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಿ ಕಾರ್ಯಾಚರಣೆ ನಡೆಸಬೇಕು ಎಂದು ಒತ್ತಾಯಿಸಲಾಯಿತು
ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯ ಲೋಪವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು. ಸಂತ್ರಸ್ತರ ದೂರನ್ನು ಸ್ವೀಕರಿಸದಿರುವ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಪೊಲೀಸರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ಮುಂದುವರಿದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಲ್ಲವ ಯುವ ವೇದಿಕೆ ಎಚ್ಚರಿಕೆ ನೀಡಿದೆ.ಇದೇ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನೂ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಬಿಲ್ಲವ ಮುಖಂಡರು ತಿಳಿಸಿದ್ದಾರೆ.