ತಾಯಿಯ ಅಂತ್ಯಕ್ರಿಯೆಯಲ್ಲಿ ಡಾನ್ ರವಿ ಪೂಜಾರಿ ಭಾಗಿ

ಲೋಕಬಂಧು ನ್ಯೂಸ್ | ಉಡುಪಿ
ಭೂಗತ ಲೋಕದ ಡಾನ್ ರವಿ ಪೂಜಾರಿ ತಾಯಿ ಸುಶೀಲಾ ಪೂಜಾರ್ತಿ (86) ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ಮಲ್ಪೆ ಸಮೀಪದ ನೇರ್ಗಿಯಲ್ಲಿ ನಡೆಯಿತು.
ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ರವಿ ಪೂಜಾರಿಗೆ ನ್ಯಾಯಾಲಯ ಶರ್ತಬದ್ಧ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ಆತನನ್ನು ಉಡುಪಿಗೆ ಕರೆತರಲಾಗಿತ್ತು.
ತಾಯಿಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳಲ್ಲಿ ರವಿ ಪೂಜಾರಿ ಪಾಲ್ಗೊಂಡು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.
ಕೊಲೆ, ಕೊಲೆ ಯತ್ನ, ಸುಲಿಗೆ, ಹಫ್ತಾ ವಸೂಲಿ, ಜೀವ ಬೆದರಿಕೆಗೆ ಸಂಬಂಧಿಸಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ರವಿ ಪೂಜಾರಿ ವಿರುದ್ಧ 200ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರ್ನಾಟಕವೊಂದರಲ್ಲೇ 90ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.


ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದ ರವಿ ಪೂಜಾರಿ, 2019 ಜ.19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್'ನಲ್ಲಿ ಬಂಧಿತನಾಗಿದ್ದ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಆನಂತರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಬಂದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗಟ್ಟಲಾಗಿತ್ತು.