ಲೋಕಬಂಧು ನ್ಯೂಸ್ | ಉಡುಪಿ
ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪಠ್ಯಕ್ರಮದ ಶಿಕ್ಷಣಕ್ಕೆ ಸೀಮಿತವಾಗಿರದೇ ಪರಿಪೂರ್ಣ ಶಿಕ್ಷಣವೇ ವಿದ್ಯಾರ್ಥಿಗಳ ಸಾಧನೆಗೆ ಅಡಿಪಾಯವಾಗಿದ್ದು, ಅದು ಅವರ ಭವಿಷ್ಯಕ್ಕೆ ಪೂರಕವಾಗಲಿದೆ. ಪ್ರತಿಭಾ ಪುರಸ್ಕಾರದ ಮೂಲಕ ಪ್ರೇರಣೆ ಪಡೆದು ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ದೇಶಕ್ಕೆ ಆಸ್ತಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಆಶಿಸಿದರು.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಪುರಭವನದಲ್ಲಿ ಶುಕ್ರವಾರ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2027ನೇ ಡೈರಿ ಬಿಡುಗಡೆ ಹಾಗೂ ಸಹಕಾರ ಕ್ಷೇತ್ರದ ಸಾಧಕರಿಗೆ ಅಭಿನಂದನ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಯಶಪಾಲ್ ನೇತೃತ್ವದಲ್ಲಿ ಬ್ಯಾಂಕ್ ಪ್ರಗತಿ
ಕಾರ್ಯಕ್ರಮ ಉದ್ಘಾಟಿಸಿದ ಜಿ.ಶಂಕರ್ ಫ್ಯಾಮಿಲಿ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಯಶಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕ್ ನಿರಂತರ ಪ್ರಗತಿ ಸಾಧಿಸುವ ಜೊತೆಗೆ ಲಾಭಾಂಶದಲ್ಲಿ ಬಹುದೊಡ್ಡ ಮೊತ್ತವನ್ನು ಶಿಕ್ಷಣಕ್ಕೆ ಪ್ರೋತ್ಸಾಹ ಹಾಗೂ ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ ಮಾದರಿ ಸಹಕಾರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮಹಾನಗರಿ ಮುಂಬೈನಲ್ಲಿಯೂ ವ್ಯವಹಾರ ವಿಸ್ತರಿಸಲು ಮುಂದಾಗಿರುವುದು ಅಭಿನಂದನಾರ್ಹ ಎಂದರು.
ಶಿಕ್ಷಣಕ್ಕೆ ಪ್ರೋತ್ಸಾಹ
ಅಧ್ಯಕ್ಷತೆ ವಹಿಸಿದ್ದ ಮಹಾಲಕ್ಷ್ಮಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ, ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಮಹಾಲಕ್ಷ್ಮಿ ಬ್ಯಾಂಕ್ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಈ ಬಾರಿಯೂ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು.
ಮಾನವೀಯ ಮೌಲ್ಯ ಅಳವಡಿಸಿ
ಕೋಟ ಗೀತಾನಂದ ಫೌಂಡೇಶನ್ ಅಧ್ಯಕ್ಷ ಆನಂದ ಸಿ. ಕುಂದರ್ ನೂತನ ಡೈರಿ ಬಿಡುಗಡೆ ಮಾಡಿ, ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅಭ್ಯಾಗತರಾಗಿದ್ದ ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶುಭ ಹಾರೈಸಿದರು.
ಸಾಧಕರಿಗೆ ಸನ್ಮಾನ
ಈ ಸಾಲಿನ 'ಸಹಕಾರ ರತ್ನ ಪ್ರಶಸ್ತಿ' ಪುರಸ್ಕೃತರಾದ ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಕುಮಾರ್, ಉಡುಪಿ ಜಿಲ್ಲೆಯ ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್ ಹಾಗೂ ಕ್ರೀಡಾ ಸಾಧಕಿ ಅಪರ್ಣಾ ಎಸ್. ಸಾಲ್ಯಾನ್ ಅವರನ್ನು ಗೌರವಿಸಲಾಯಿತು.
ಉಡುಪಿ- ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಉದ್ಯಮಿ ಆನಂದ ಪಿ. ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ವ್ಯವಸ್ಥಾಪನ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಎನ್., ಸಹಾಯಕ ಪ್ರಧಾನ ವ್ಯವಸ್ಥಾಪಕಿ ಶಾರಿಕಾ ಕಿರಣ್, ಆನಂದ ಸೆಲ್ವಂ ಉಪಸ್ಥಿತರಿದ್ದರು.
ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
