ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರ ಬಂಧನ

ಲೋಕಬಂಧು ನ್ಯೂಸ್ ಪಡುಬಿದ್ರಿ
ಗೋವಾ ರಾಜ್ಯದಿಂದ ಯಾವುದೇ ಪರವಾನಗಿ ಇಲ್ಲದೆ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, 22.35 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ ಎರಡು ವಾಹನಗಳನ್ನು‌‌‌ ಬುಧವಾರ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಕಾಪು ಪೊಲೀಸ್ ವೃತ್ತನಿರೀಕ್ಷಕ ಅಜ್ಮತ್ ಆಲಿ ಅವರು ಹೆಜಮಾಡಿ ಟೋಲ್ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಯಾಚರಣೆ ನಡೆಸಿದರು. ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನ ಹಾಗೂ ಅದಕ್ಕೆ ಎಸ್ಕಾರ್ಟ್ ನೀಡುತ್ತಿದ್ದ ಮತ್ತೊಂದು ವಾಹನವನ್ನು ತಡೆದು ಪರಿಶೀಲಿಸಲಾಯಿತು.


ಪ್ರಕರಣ ಸಂಬಂಧ ಕಾರವಾರದ ಕಿನ್ನಾರ ಗ್ರಾಮದ ವಿನಯ್ (47), ನಂದಗಡದ ಗಜಾನನ ಮಹಾಬಲೇಶ್ವರ ನಾಯ್ಕ್ (45), ಅಮದಹಳ್ಳಿಯ ಸುಜಿತ್ ತಾಳೆಕೆರೆ (25) ಮತ್ತು ಶಿರ್ವಾಡ ಗ್ರಾಮದ ಲಾರೆನ್ಸ್ ಥಾಮಸ್ ಮೆಂಡೋನ್ಸ್ (49) ಅವರನ್ನು ಬಂಧಿಸಲಾಗಿದೆ.


ಆರೋಪಿಗಳಿಂದ ಸುಮಾರು 14.35 ಲಕ್ಷ ರೂ. ಮೌಲ್ಯದ 2,583 ಲೀ. ಮದ್ಯ, 5 ಲಕ್ಷ ರೂ. ಮೌಲ್ಯದ ಮಹೀಂದ್ರಾ ಪಿಕ್ಅಪ್ ಇನ್ಸುಲೇಟರ್ ವಾಹನ ಹಾಗೂ 3 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 22.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.


ಬಂಧಿತರ ಪೈಕಿ ವಿನಯ್ ವಿರುದ್ಧ ಈ ಹಿಂದೆಯೂ ಕಾರವಾರ ಚಿತ್ತಾಕುಲ ಪೊಲೀಸ್ ಠಾಣೆ, ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಅಬಕಾರಿ ಪೊಲೀಸ್ ಠಾಣೆಗಳಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.


ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.