ಲೋಕಬಂಧು ನ್ಯೂಸ್ | ಉಡುಪಿ
ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಉಡುಪಿ ವತಿಯಿಂದ ಉಡುಪಿ, ಕಾಪು, ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, 2027ನೇ ಸಾಲಿನ ಡೈರಿ ಬಿಡುಗಡೆ ಹಾಗೂ ಈ ಸಾಲಿನ 'ಸಹಕಾರ ರತ್ನ' ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಕುಮಾರ್, ಉಡುಪಿ ಜಿಲ್ಲೆಯ ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಪುರಭವನದಲ್ಲಿ ನ.27ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಸಮಾರಂಭವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್ ಉದ್ಘಾಟಿಸಲಿದ್ದು, ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು, 2027ನೇ ಸಾಲಿನ ಬ್ಯಾಂಕಿನ ಡೈರಿಯನ್ನು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಬಿಡುಗಡೆ ಮಾಡಲಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಂಗಳೂರು ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಮೇಘರಾಜ್ ಆರ್. ಜೈನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಜೆ. ಕರ್ಕೇರ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಅಜಯ್ ಪಿ. ಶೆಟ್ಟಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.