ಲೋಕಬಂಧು ನ್ಯೂಸ್ ಮಂಗಳೂರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಗುದ್ದಾಟ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಅವರಿಬ್ಬರ ನಡುವಿನ ಗೊಂದಲದಿಂದ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷವೇ ಸಿ.ಡಿ. ಪ್ರಕರಣದಲ್ಲಿ ಸಿಲುಕಿಸಿದೆ ಎಂದು ಅವರ ಪುತ್ರನೇ ಹೇಳಿಕೊಂಡಿದ್ದಾರೆ. ಸ್ಟಿಂಗ್ ಪ್ರಕರಣದಲ್ಲಿ ಎಲ್ಲರಿಗೂ ಕ್ಲೀನ್ಚಿಟ್ ನೀಡುವ ಉದ್ದೇಶದಿಂದಲೇ ಎಸ್ಐಟಿ ರಚಿಸಲಾಗಿದೆ ಎಂದು ಅಶೋಕ್ ಆರೋಪಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಬೇಕು ಎಂಬ ಒಲವು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಈ ಹಿಂದೆ ಒಂದು ಬಾರಿ ಗೆಲುವು ಸಾಧಿಸಿದ್ದು, ಮತ್ತೊಂದು ಬಾರಿ ಎರಡನೇ ಸ್ಥಾನ ಪಡೆದಿದೆ. ಹಾಗಾಗಿ ಸ್ಪರ್ಧೆಗೆ ನ್ಯಾಯಯುತವಾಗಿ ಬೇಡಿಕೆ ಮಂಡಿಸುತ್ತೇವೆ. ಆದರೆ, ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ಜಗಳಕ್ಕೆ ಅವಕಾಶ ನೀಡುವುದಿಲ್ಲ. ರಾಷ್ಟ್ರೀಯ ನಾಯಕರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವಂತೆ ಸೂಚಿಸಿದರೆ ಅದಕ್ಕೆ ಬದ್ಧರಾಗಿರುತ್ತೇವೆ. ಬಿಜೆಪಿ ಸ್ಪರ್ಧಿಸಿದರೂ ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸುತ್ತೇವೆ ಎಂದರು.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಂದಲೇ ಹಣ ವಸೂಲಿ ಮಾಡುತ್ತಿರುವ ರಾಜ್ಯ ಸರಕಾರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ನೀಡುವ ಭರವಸೆ ನೀಡಿದ್ದರು. ಆದರೆ, ಚುನಾವಣೆ ಮುಗಿದ ಬಳಿಕ ಅವರ ಸುಳಿವೇ ಇಲ್ಲ. ಇದು ಕಾಂಗ್ರೆಸ್ನ ಮೋಸದ ರಾಜಕಾರಣ ಎಂದು ಆರ್. ಅಶೋಕ್ ಟೀಕಿಸಿದರು.
ಪುತ್ತೂರಿನಲ್ಲಿ ಬಿಜೆಪಿ ಗೆಲ್ಲಲಿದೆ
ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದಿನ ಚುನಾವಣೆಯಲ್ಲಿ ಪಕ್ಷದೊಳಗಿನ ಸಮನ್ವಯದ ಕೊರತೆಯಿಂದ ಹಿನ್ನಡೆಯಾಗಿತ್ತು. ಈ ಬಾರಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರ ನೇತೃತ್ವದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
ರಾಜ್ಯ ಸರಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಬೆಲೆ ಏರಿಕೆಯಲ್ಲಿ ತೊಡಗಿದೆ. ಸರಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ ಎಂದು ಆರ್. ಅಶೋಕ್ ಟೀಕಿಸಿದರು.